ಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸುವ ಜತೆಗೆ ಶಿಕ್ಷೆಯ ಪ್ರಮಾಣ ಹೆಚ್ಚಳವಾಗುವಂತೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜಾಗೃತ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ಪ್ರಕರಣಗಳಿಗೆ ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಿ.
ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10ರಷ್ಟಿದ್ದುದು, ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10ಕ್ಕೆ ಹೆಚ್ಚಿಸುವುದಕ್ಕೆ ಕ್ರಮ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದರು.
ಈ ಬಗ್ಗೆ ಸರಕಾರಿ ಪ್ರಾಸಿಕ್ಯೂಟರ್‌ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾ ಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೆ ಪ್ರಗತಿ ಪರಿಶೀಲನ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಸರಕಾರಿ ಪ್ರಾಸಿಕ್ಯೂಟರ್‌ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೆ ಆಡಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿನ ಶಿಕ್ಷೆ ಒದಗಿಸುವುದು ಎಲ್ಲರ ಜವಾಬ್ದಾರಿ. ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನಿಗದಿತ ಅವಧಿಯ ಒಳಗಾಗಿ ಸಲ್ಲಿಸಬೇಕು ಎಂದು ಹೇಳಿದರು.
ಸಭೆಯ ಪ್ರಮುಖ ನಿರ್ದೇಶನಗಳು
– ಬ್ಯಾಕ್‌ಲಾಗ್ ನೇಮಕಾತಿ ಮತ್ತು ಮುಂಭಡ್ತಿ ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಈ ಕುರಿತು ಇಲಾಖೆವಾರು ಸಭೆ ನಡೆಸಲು ಮುಖ್ಯಕಾರ್ಯದರ್ಶಿಯವರಿಗೆ ಸೂಚನೆ.
– ದೇವದಾಸಿ ಪದ್ಧತಿ ಯಾವುದೇ ಜಿಲ್ಲೆಗಳಲ್ಲಿ ನಡೆದರೆ ಅದಕ್ಕೆ ಜಿಲ್ಲಾ ಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅವರೇ ನೇರ ಹೊಣೆ. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವುದು ಜಿಲ್ಲಾ ಡಳಿತದ ಜವಾಬ್ದಾರಿ. ಈ ಕುರಿತು ಯಾವುದೇ ದೂರಿಗೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು.
– ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.
– ಹಕ್ಕುಪತ್ರ ನೀಡಿದ ಬಳಿಕ ಪಹಣಿಯಲ್ಲಿ ಅವರ ಹೆಸರು ನಮೂದಿಸುವ ಕಾರ್ಯ ತ್ವರಿತಗೊಳಿಸಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು.
– ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. 60 ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನ್ಯಾಯಾಲಯಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ.
– ಪ್ರತೀ ಜಿಲ್ಲೆಯಲ್ಲಿ ಡಿಸಿಆರ್‌ಇ ಕೋಶವನ್ನು ಸ್ಥಾಪಿಸುವ ಕುರಿತು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದಷ್ಟು ಬೇಗ ಇದಕ್ಕೆ ಮೂಲ ಸೌಕರ್ಯ ಒದಗಿಸಲಾಗುವುದು.
– ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪ್ರತೀ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಬೇಕು. ಪ್ರಾಸಿಕ್ಯೂಶನ್ ಕೂಡ ಪರಿಶೀಲನೆ ನಡೆಸಬೇಕು. ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಈ ಸಭೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗುವುದು.
– ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು.

Post a Comment