ಜನೌಷಧಿ ಕೇಂದ್ರ ಮುಚ್ಚಬೇಡಿ: ಸಿಎಂ ಸಿದ್ದರಾಮಯ್ಯಗೆ ಸೋಮಣ್ಣ ಮನವಿ


  ವದೆಹಲಿ (ಮೇ.28): ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚದಂತೆ ಮನವಿ ಮಾಡಿದ್ದಾರೆ. ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಬಡ ಕೆಳವರ್ಗ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯಂತ ಕಾಳಜಿ ಹಾಗೂ ದೂರದೃಷ್ಟಿಯಿಂದ ತೆರೆದಿದ್ದಾರೆ.

ಆದರೆ, ಕರ್ನಾಟಕ ಸರ್ಕಾರ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ತೀರ್ಮಾನವನ್ನು ತೆಗೆದುಕೊಂಡಿದ್ದು ಹಾಗೂ ಈಗಾಗಲೇ ಚಾಲನೆಯಲ್ಲಿರುವ ಕೇಂದ್ರದ ಪರವಾನಿಗೆಯನ್ನು ನವೀಕರಿಸದೆ ಇರುವುದು ಅತ್ಯಂತ ಖೇದಕರ ಸಂಗತಿ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಜನೌಷಧಿ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಔಷಧಿ ಸಿಗುತ್ತಿದೆ. ಸರ್ಜಿಕಲ್ ಐಟಂಗಳು ರೋಗಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿವೆ. ಅವರ ಚಿಕಿತ್ಸಾ ವೆಚ್ಚವನ್ನು ನಿಭಾಯಿಸಲು ಇದು ಅನುಕೂಲ ಮಾಡಿಕೊಟ್ಟಿದೆ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.


ದೀರ್ಘಕಾಲದ ರಾಜಕೀಯ ಅನುಭವ ಹೊಂದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಬಡವರು ಹಾಗೂ ಕೆಳವರ್ಗದವರ ಹಿತವನ್ನು ಕಾಯಲು ಮುಂದಾಗುತ್ತಿಲ್ಲ. ಯಾವ ಕಾರಣದಿಂದ ಕರ್ನಾಟಕ ರಾಜ್ಯದ ಬಡವರ ವಿರುದ್ಧ ಅವರು ಕೆಲಸ ಮಾಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಅವರು ವಿಷಾದಿಸಿದ್ದಾರೆ. ಈ ಕೂಡಲೇ ಸಿದ್ದರಾಮಯ್ಯನವರು ತಮ್ಮ ನಿರ್ಧಾರವನ್ನು ಮರು ಪರಿಶೀಲಿಸಿ, ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶವನ್ನು ಹಿಂಪಡೆಯಬೇಕು. ಈಗಾಗಲೇ ಚಾಲ್ತಿಯಲ್ಲಿರುವ ಕೇಂದ್ರಗಳ ಪರವಾನಿಗೆಯನ್ನು ಮುಂದುವರಿಸಲು ಆದೇಶವನ್ನು ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.


ಜನೌಷಧಿ ಕೇಂದ್ರಗಳ ತೆರವು ಕೀಳು ರಾಜಕಾರಣ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜನಪರ ಯೋಜನೆ 'ಪ್ರಧಾನಮಂತ್ರಿ ಜನೌಷಧಿ ಕೇಂದ್ರ'ಗಳನ್ನು ರಾಜ್ಯದ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವುದು ಕಾಂಗ್ರೆಸ್ ಸರ್ಕಾರದ ಕೀಳು ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡವರಿಗೆ ಕೈಗೆಟಕುವ ದರದಲ್ಲಿ ಔಷಧಿಗಳು ದೊರಕಬೇಕು, ಔಷಧಿಗಳ ಕೊರತೆಯಿಂದ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬ ಸದುದ್ದೇಶದಿಂದ ಕೇಂದ್ರ ಸರಕಾರ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ತೆರೆದಿದೆ.


ಆದರೆ ಈ ಜನೌಷಧಿ ಕೇಂದ್ರದ ನಾಮಫಲಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಇರುವುದನ್ನು ಸಹಿಸದೆ, ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಔಷಧಿಗಳ ಸಮರ್ಪಕ ವ್ಯವಸ್ಥೆಯನ್ನೂ ಮಾಡದೆ, ಕೇವಲ ದ್ವೇಷ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸಿ ಬಡವರ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ಎಂದವರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲಾ ಔಷಧಿಗಳು ಉಚಿತವಾಗಿ ದೊರೆಯುತ್ತದೆ ಎಂಬ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಹೇಳಿದ್ದಾರೆ.

Post a Comment

Previous Post Next Post