ಟ್ನಾ: ಚುನಾವಣೆಗೂ (Election) ಮುನ್ನವೇ ಬಿಹಾರದ (Bihar) ಮಹಿಳೆಯರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ನೇತೃತ್ವದ ಎನ್‌ಡಿಎ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ (Mukhyamantri Mahila Rojgar Yojana) ಚಾಲನೆ ನೀಡಿದ್ದಾರೆ.
ಈ ಯೋಜನೆಯ ಮೂಲಕ ಬಿಹಾರದಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ. ಇದಕ್ಕಾಗಿ ಒಟ್ಟು 7,500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ.
ಯೋಜನೆ ಉದ್ಘಾಟಿಸಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ನವರಾತ್ರಿಯ ಈ ಶುಭ ಸಂದರ್ಭದಲ್ಲಿ ಬಿಹಾರದ ಮಹಿಳೆಯರ ಸಂತೋಷದಲ್ಲಿ ಪಾಲ್ಗೊಳ್ಳಲು ನನಗೆ ಹರ್ಷವಾಗುತ್ತಿದೆ. ನಾನು ಪರದೆಯ ಮೇಲೆ ಲಕ್ಷಾಂತರ ಮಹಿಳೆಯರನ್ನ ನೋಡುತ್ತಿದ್ದೇನೆ. ಅವರ ಆಶೀರ್ವಾದ ನಮಗೆಲ್ಲರಿಗೂ ಶಕ್ತಿಯ ಮೂಲವಾಗಿದೆ. ಅವರೆಲ್ಲರಿಗೂ ನನ್ನ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಇಂದು ಪ್ರಾರಂಭಿಸಲಾಗುತ್ತಿದೆ. ಇಲ್ಲಿಯವರೆಗೆ 75 ಲಕ್ಷ ಮಹಿಳೆಯರು ಈ ಯೋಜನೆಗೆ ಸೇರಿದ್ದಾರೆ. ಈ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 10 ಸಾವಿರ ರೂ.ಗಳನ್ನು ವರ್ಗಾಯಿಸಲಾಗಿದೆ ಎಂದು ಅವರು ಹೇಳಿದರು.
ಇದೇ ವೇಳೆ ಬಿಹಾರ ಸಿಎಂ ನಿತೀಶ್ ಕುಮಾರ್ ಮಾತನಾಡಿ, ಪ್ರಧಾನಿ ನಿಮಗಾಗಿ (ಮಹಿಳೆಯರಿಗೆ) ಬಹಳಷ್ಟು ಕೆಲಸಗಳನ್ನು ಮಾಡುತ್ತಿದ್ದಾರೆ. ಈ ಹಿಂದಿನ ಸರ್ಕಾರ ಮಹಿಳೆಯರ ಪರ ಇರಲಿಲ್ಲ. ಲಾಲು ಪ್ರಸಾದ್ ಯಾದವ್ ಪದಚ್ಯುತಗೊಳಿಸಿದಾಗ, ಅವರು ತಮ್ಮ ಪತ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು. ಅವರು ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸಿದ್ದರು. ಆದರೆ ನಾವು ಇಂದು ನಮ್ಮ ಕುಟುಂಬಗಳನ್ನು ನೋಡಿಕೊಳ್ಳುವುದಿಲ್ಲ. ಬದಲಾಗಿ ಇಡೀ ಬಿಹಾರದ ಜನತೆಗಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಇನ್ನು ಈ ಸಂಬಂಧ ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಬಿಹಾರದ ಹೆಣ್ಣುಮಕ್ಕಳು ಮತ್ತು ಸಹೋದರಿಯರಿಗೆ ಇದೊಂದು ಐತಿಹಾಸಿಕ ದಿನ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯಡಿ ಬಿಹಾರದ 75 ಲಕ್ಷ ಮಹಿಳಾ ಫಲಾನುಭವಿಗಳಿಗೆ ತಲಾ 10,000 ರೂ.ಗಳನ್ನು ವರ್ಗಾಯಿಸಲಿದ್ದಾರೆ. ಇದು ಮಹಿಳೆಯರಿಗೆ ಸ್ವ-ಉದ್ಯೋಗಕ್ಕಾಗಿ ಆರ್ಥಿಕ ನೆರವು ನೀಡುವುದಲ್ಲದೆ, ಅವರನ್ನು ಸ್ವಾವಲಂಬಿ ಮತ್ತು ಸಬಲೀಕರಣಗೊಳಿಸುವತ್ತ ಬಲವಾದ ಹೆಜ್ಜೆಯಾಗಿದೆ ಎಂದಿದ್ದಾರೆ.
ಒಟ್ಟಾರೆಯಾಗಿ ಬಿಹಾರದ ಎನ್‌ಡಿಎ ಸರ್ಕಾರದ ಭಾಗವಾದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯು ಸ್ವ-ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಮೂಲಕ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
Post a Comment