NDRF ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸಿದ್ದರಾಮಯ್ಯ ಹೇಳಿದ್ದೇನು?


  ಳಗಾವಿ, ಅಕ್ಟೋಬರ್ 4: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆ ಕುರಿತು ಇಂದು(ಶನಿವಾರ) ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ.

 ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು.


ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಹಾಗೂ ಇಂದು ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಲಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಾಸಕ ಸಿ.ಟಿ.ರವಿಯವರು ಮುಖ್ಯಮಂತ್ರಿಯವರ ವಿಚಾರದಲ್ಲಿ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದರು.


ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಈಗ ಜಾರಿಗೆ ತಂದಿರುವ ಗ್ಯಾರಂಟಿಗಳು ರಾಜ್ಯದ ಜನರ ಕೊಳ್ಳುವ ಶಕ್ತಿಯನ್ನು, ತಲಾ ಆದಾಯವನ್ನು ಹೆಚ್ಚಿಸಿ‌ ಮಹಿಳೆಯರನ್ನೂ ಆರ್ಥಿಕವಾಗಿ ಸಬಲರನ್ನಾಗಿ ಮಾಡಲಾಗಿದೆ ಎಂದರು.


ಬಡವರಿಗೆ ಆರ್ಥಿಕವಾಗಿ ಶಕ್ತಿ ಬಂದರೆ ಸಮಾಜದ ಜಾತಿ ವ್ಯವಸ್ಥೆ, ಅಸಮಾನತೆ ಅಳಿಸಲು ಸಾಧ್ಯವಾಗುತ್ತದೆ ಎಂದರು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶೇ95 ರಷ್ಟು ಅಧಿಕ ಮಳೆಯಾಗಿ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಬೆಳೆ ನಾಶ ಆಗಿರುವ ಅಂದಾಜಿದೆ. ಈ ಬೆಳೆ ಹಾನಿಗೆ ದಾಖಲೆ ಮೊತ್ತದ ಪರಿಹಾರ ಹಣ ನೀಡಿ ರೈತರು, ಬೆಳೆಗಾರರು, ಕೃಷಿಕರ ನೆರವಿಗೆ ಧಾವಿಸಿದ್ದೇವೆ ಎಂದರು.


ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದರು.


ಬುದ್ದ-ಬಸವ-ಗಾಂಧಿ-ಅಂಬೇಡ್ಕರ್ ಆಶಯದಂತೆ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಸಮಾಜದ ಕಟ್ಟ ಕಡೆಯವರಿಗೂ ಅಭಿವೃದ್ಧಿ ತಲುಪಿದಾಗ ಮಾತ್ರ ಸಮಾಜದ, ದೇಶದ ಅಭಿವೃದ್ಧಿ ಸಾಧ್ಯ ಎನ್ನುವುದು ಎಲ್ಲರ ಆಶಯವಾಗಿದೆ. ಹೀಗಾಗಿ ಎಲ್ಲರ ಕಲ್ಯಾಣ ಕಾರ್ಯಕ್ರಮಗಳನ್ನು ನಾವು ರೂಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಅವರು ವಿವರಿಸಿದರು.

Post a Comment

Previous Post Next Post